ಸಿರಗುಪ್ಪ.
ಭಾರತೀಯ ಜನತಾ ಪಕ್ಷದಲ್ಲಿ ಎರಡು ಮೂರು ಬಣಗಳಾಗಿವೆ. ಆದರೆ ನಾನು ಯಾವುದೇ ಬಣದಲ್ಲಿ ಗುರುತಿಸಿಕೊಳ್ಳುವ ವ್ಯಕ್ತಿಯಲ್ಲ. ಭಾರತೀಯ ಜನತಾ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಬಿ.ವೈ.ವಿಜಯೇಂದ್ರ ಅವರು ಹೈಕಮಾಂಡ್ ಸೂಚನೆಯಂತೆ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಸ್ಪಷ್ಟಪಡಿಸಿದರು.
ಮಂಗಳವಾರ ತಾಲೂಕಿನ ಅಚ್ಚೋಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಾರಿಕಾಂಬಾ ದೇವಿ ಕುಂಭೋತ್ಸವ ಹಾಗೂ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ತಮ್ಮ ನಿಲವನ್ನು ಸ್ಪಷ್ಟಪಡಿಸಿದರು. ಬಿಜೆಪಿ ರಾಜ್ಯದಲ್ಲಿ ವಿರೊಧ ಪಕ್ಷವಾಗಿ ಬಲಿಷ್ಟವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲವು ನಾಯಕರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಬಿಜೆಪಿ ಕೆಲಸ ಕಾರ್ಯಗಳು ಜನರಿಗೆ ಗೊತ್ತಾಗುತ್ತಿಲ್ಲ. ವೈಯಕ್ತಿಕ ಪ್ರತಿಷ್ಟೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ನಡೆಯುತ್ತದೆ. ಇದನ್ನು ಹೈಕಮಾಂಡ್ ಸರಿಪಡಿಸುತ್ತದೆ ಎಂಬ ವಿಶ್ವಾಸ ನಮಗೆ ಇದೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ನಾವು ಅದನ್ನು ಒಪ್ಪಿಕೊಳ್ಳಬೇಕು. ಚುನಾವಣೆ ಪ್ರಕ್ರೀಯೆ ಮೂಲಕ ರಾಜ್ಯಾಧ್ಯಕ್ಷರನ್ನು ಹೈಕಮಾಂಡ್ ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು. ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರು ಬದ್ಧರಾಗಿ ಕೆಲಸ ಮಾಡಬೇಕು. ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಸಾಲು ಸಾಲು ಹಗರಣದಲ್ಲಿ ಸಿಲುಕಿರುವ ಕಾಂಗ್ರೆಸ್ ಸರಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಇದನ್ನು ನಾವು ಜನರ ಮುಂದೆ ಕೊಂಡಯ್ಯೋಬೇಕಿದೆ ಎಂದು ಸೋಮಲಿಂಗಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಲ್ಲಿಕಾರ್ಜುನ ಕುಂಟುನಾಳ, ಮೆಕಲಿ ವಿರೇಶ, ಸಣ್ಣ ಯಂಕೋಬ, ಹುಲಗಪ್ಪ, ರಾಮಕೃಷ್ಣ, ಮಹಮ್ಮದ್, ಬಸವರಾಜ ಇದ್ದರು.